ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Waves of Karnataka


 ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದು ಹೇಳಿದರು.