ಮುಡಾ ಹಗರಣ (MUDA Scam, MUDA case) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand gehlot) ಅವರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ (Congress protest) ಇಂದು ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆಗೆ ವೇಗ ದೊರೆತಿದೆ. ಮುಂಜಾನೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಎಲ್ಲೆಡೆ ಜಮಾಯಿಸಿ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದರು. ರಾಜಧಾನಿಯಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಿ ಧರಣಿ ಪ್ರತಿಭಟನೆ ನಡೆಸಿದರು.
ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್, ಬಿಕೆ ಹರಿಪ್ರಸಾದ್, ಯುಬಿ ವೆಂಕಟೇಶ್, ಸಲೀಂ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಮೂರು ಕೆಎಸ್‌ಆರ್‌ಪಿ ತುಕಡಿ, 100 ಮಹಿಳಾ ಪೊಲೀಸ್, 10 ಪಿಎಸ್‌ಐ, 5 ಪಿಐಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.