ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಒಪ್ಪಂದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಒಪ್ಪಂದ ಆಗಿದೆ ಅಂತಾದ್ರೆ ನಾವೆಲ್ಲ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ, ಬೇರೆ ಅವರು ಇರೋದೇ ಬೇಡವಾ? ಅದೆಲ್ಲ ಆ ರೀತಿ ಆಗೋಕೆ ಸಾಧ್ಯವಿಲ್ಲ. ಹೈಕಮಾಂಡ್ ಬಿಟ್ಟು ನಾವು ಹೋಗೋರಲ್ಲ. ಹೈಕಮಾಂಡ್ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ. ಒಪ್ಪಂದ ಎಲ್ಲ ನಮಗೆ ಗೊತ್ತಿಲ್ಲ ಎಂದು ಹೇಳಿದರು.